ಕೋಡಿಹಳ್ಳಿಯಲ್ಲಿ ಹಾಸ್ಟೆಲ್ ಊಟ ಸವಿದ ಜಿಲ್ಲಾಧಿಕಾರಿ

ರಾಜ್ಯ

ಕೋಡಿಹಳ್ಳಿಯಲ್ಲಿ ಹಾಸ್ಟೆಲ್ ಊಟ ಸವಿದ ಜಿಲ್ಲಾಧಿಕಾರಿ

 

 

 

ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಸರತಿ ಸಾಲಿನಲ್ಲಿ ಕುಳಿತು ಹಾಸ್ಟೆಲ್ ಊಟ ಸೇವಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಹಿರಿಯೂರು ತಾಲ್ಲೂಕಿನ ಮ್ಯಾದನಹೊಳೆ ಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಇಲ್ಲಿಗೆ ಸಮೀಪದ ಕೋಡಿಹಳ್ಳಿ ಗ್ರಾಮಕ್ಕೂ ತೆರಳಿ, ಇಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಹಾಸ್ಟೆಲ್‍ನಲ್ಲಿನ ಮೆನು ಚಾರ್ಟ್ ಪ್ರಕಾರ ತಿಂಡಿ, ಊಟ, ಬಾಳೆಹಣ್ಣು, ಮೊಟ್ಟೆ, ಇತ್ಯಾದಿ ಊಟೋಪಹಾರವನ್ನು ಸಮರ್ಪಕವಾಗಿ ನೀಡಲಾಗುತ್ತಿದೆಯೇ, ರುಚಿಯಾದ, ಗುಣಮಟ್ಟದ ಆಹಾರ ನೀಡುತ್ತಿದ್ದಾರೆಯೇ ಎಂದು ಜಿಲ್ಲಾಧಿಕಾರಿಗಳು ಹಾಸ್ಟೆಲ್‍ನಲ್ಲಿದ್ದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು, ಮೆನು ಚಾರ್ಟ್ ಪ್ರಕಾರ ತಿಂಡಿ, ಊಟ ನೀಡಲಾಗುತ್ತಿದ್ದು, ರುಚಿಯಾದ, ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಾಸ್ಟೆಲ್‍ನಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು. ಮಕ್ಕಳು ಶಿಕ್ಷಣವನ್ನು ಹೆಚ್ಚು ಆಸಕ್ತಿಯಿಂದ ಕಲಿಯಬೇಕು, ವಿದ್ಯೆ ಪಡೆಯುವಾಗ ಏಕಾಗ್ರತೆ ಕಾಪಾಡಿಕೊಳ್ಳಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮಕ್ಕಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿ ನಿಲಯದ ದಾಸ್ತಾನು ಕೊಠಡಿ, ಅಡುಗೆ ಕೋಣೆ, ಊಟದ ಸಭಾಂಗಣ, ನಿಲಯ ಪಾಲಕರ ಕೊಠಡಿ, ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ಸ್ನಾನ ಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿ ನಿಲಯ ಸ್ವಚ್ಛತೆಯಿಂದ ಕೂಡಿರಬೇಕು. ಮುಂದೆಯೂ ಇದೇ ರೀತಿಯಾಗಿ ಉತ್ತಮವಾಗಿ ವಿದ್ಯಾರ್ಥಿ ನಿಲಯ ನಿರ್ವಹಣೆ ಮಾಡಬೇಕು ಎಂದು ಅಲ್ಲಿನ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯೂರು ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ನಿಲಯ ಪಾಲಕ ಲಚುಮಪ್ಪ ಸೇರಿದಂತೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *