ಸಾಲ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ಅಗತ್ಯ- ಡಾ. ವಿಜಯಕುಮಾರ್ ಸಾಲಕೋಟಿ

ರಾಜ್ಯ

ಸಾಲ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ಅಗತ್ಯ- ಡಾ. ವಿಜಯಕುಮಾರ್ ಸಾಲಕೋಟಿ

 

 

 

ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಂದ ನೀಡುವ ಸಾಲ ಸೌಲಭ್ಯದ ಬಗ್ಗೆ ಹೆಚ್ಚು ಪ್ರಚಾರ ನೀಡಿ, ಸಾಲ ಕೋರಿ ಬಂದಿರುವ ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕೆಂದು ರಾಷ್ಟ್ರಿಯ ಪರಿಶಿಷ್ಟ ಜಾತಿಗಳ ಆರ್ಥಿಕ ಮತ್ತು ಅಭಿವೃದ್ಧಿ ನಿಗಮದ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ವಿಜಯಕುಮಾರ್ ಸಾಲಕೋಟಿ ಅವರು ವಿವಿಧ ಇಲಾಖಾಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಲ ಮೇಳವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಗುರುವಾರ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ಸಾಲ ಮೇಳವನ್ನು ಆಯೋಜಿಸಬೇಕಾಗಿರುತ್ತದೆ.  ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಅಧಿಕಾರಿಗಳು ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ಕೈಗೊಳ್ಳಬೇಕು  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸೌಲಭ್ಯಗಳಡಿ ಕುರಿ ಹಾಗೂ ಹಸು ಸಾಕಾಣಿಕೆ ಮಾಡಿ ಅರ್ಥಿಕ ಅಭಿವೃದ್ದಿ ಸಾಧಿಸಲು ವಿವಿಧ ನಿಗಮಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಗೆ ಅನುದಾನ  ಬಿಡುಗಡೆ ಮಾಡುತ್ತಿದ್ದು, ಸುಮಾರು 30 ಸಾವಿರ ಕುಟುಂಬಗಳಿಗೆ ಸಾಲ ನೀಡಬಹುದಾಗಿದೆ.  ಆದರೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ವ್ಯಾಪಕ ಪ್ರಚಾರ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಅರ್ಜಿಗಳು ಬಂದಿರುವುದಿಲ್ಲ ಎಂದು  ವಿಜಯಕುಮಾರ್ ಬೇಸರ ವ್ಯಕ್ತಪಡಿಸಿದರು.
ಸಾಲ ಮೇಳದ ಬಗ್ಗೆ ಸರಿಯಾದ ಪ್ರಚಾರವನ್ನು ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ಜೊತೆಗೆ ಈಗಾಗಲೇ ಸಾಲ ಕೇಳಿ ಅರ್ಜಿ ಹಾಕಿರುವ ಹಾಗೂ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಸಾಲ ದೊರೆಯುವಂತೆ ನೋಡಿಕೊಳ್ಳಬೇಕು. ಇದೇ ಫೆ. 24 ರೊಳಗೆ ಎಲ್ಲಾ ವರದಿಯನ್ನು ಚಿತ್ರದುರ್ಗ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸಲ್ಲಿಸಬೇಕು ಎಂದು ವಿಜಯಕುಮಾರ್ ಅವರು ಸೂಚಿಸಿದರು.
ಚಿತ್ರದುರ್ಗ ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಮಾತನಾಡಿ, ಬ್ಯಾಂಕ್‍ಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು. ಹೆಚ್ಚು  ಅರ್ಜಿಗಳನ್ನು ಸಾಲ ಮೇಳದಲ್ಲಿ ಹಾಕುವಂತೆ ಜನರಲ್ಲಿ  ಅರಿವು ಮೂಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ  ರಾಷ್ಟ್ರೀಯ ಪ.ಜಾತಿಗಳ ಆರ್ಥಿಕ ಮತ್ತು ಅಭಿವೃದ್ಧಿ ನಿಗಮದ ವಲಯ ವ್ಯವಸ್ಥಾಪಕಿ ಕೃಷ್ಣವೇಣಿ, ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳ ಅಧಿಕಾರಿಗಳು,   ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಬ್ಯಾಂಕ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *